ನವದೆಹಲಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.
ಏನಿದು ಪ್ರಕರಣ? ಕಳೆದ ಕೆಲವು ದಿನಗಳ ಹಿಂದೆ ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಸಿಬಿಐ (CBI) ಮನವಿಯ ಮೇರೆಗೆ ಜನಪ್ರತಿನಿಧಿಗಳ ನ್ಯಾಯಾಲಯವು ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ಶರಣಾಗಿ ಜೈಲು ಪಾಲಾಗಿದ್ದರು. ಕೆಳಹಂತದ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಕುಲಕರ್ಣಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಸುಪ್ರೀಂ ಕೋರ್ಟ್ ಆದೇಶ: ನ್ಯಾಯಮೂರ್ತಿ ಸಂಜಯ್ ಕರೋಲ್ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿ, ಶಾಸಕರಿಗೆ ಜಾಮೀನು ನೀಡಿದೆ. ಸಿಬಿಐ ಪರ ವಕೀಲರು ಸಾಕ್ಷಿ ನಾಶದ ಆತಂಕವನ್ನು ವ್ಯಕ್ತಪಡಿಸಿದರೂ, ಸುಪ್ರೀಂ ಕೋರ್ಟ್ ಕೆಲವು ಷರತ್ತುಗಳೊಂದಿಗೆ ಜಾಮೀನು ಆದೇಶ ಹೊರಡಿಸಿದೆ. ಇದು ವಿನಯ್ ಕುಲಕರ್ಣಿ ಬೆಂಬಲಿಗರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ.