ಬೆಂಗಳೂರಿನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಆವರಣದ ಬಳಿ ಸಂಭವಿಸಿದ ಗೋಡೆ ಕುಸಿತದ ಘಟನೆಯಲ್ಲಿ ಏಳು ಮಂದಿ ಅಮಾಯಕರು ಮೃತಪಟ್ಟಿರುವುದು ಅತ್ಯಂತ ಹೃದಯವಿದ್ರಾವಕವಾಗಿದೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಆಸರೆಯಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಒಟ್ಟು 15 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಹಾಸನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸದ್ಯ ಸರ್ಕಾರ ಘೋಷಿಸಿರುವ ಅಲ್ಪ ಮೊತ್ತದ ಪರಿಹಾರವು ಅನಾಥವಾಗಿರುವ ಕುಟುಂಬಗಳ ಜೀವನ ನಿರ್ವಹಣೆಗೆ ಸಾಕಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ದುರಂತದ ದೃಶ್ಯಗಳು ಅತ್ಯಂತ ಭೀಕರವಾಗಿದ್ದು ಮನಸ್ಸಿಗೆ ತೀವ್ರ ನೋವುಂಟು ಮಾಡುತ್ತಿವೆ ಎಂದು ರೇವಣ್ಣ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಗೋಡೆಯ ಪಕ್ಕದಲ್ಲಿಯೇ ಸಣ್ಣಪುಟ್ಟ ವ್ಯಾಪಾರಗಳನ್ನು ಮಾಡಿಕೊಂಡು ಜೀವನ ನಡೆಸುತ್ತಿದ್ದ ಬಡವರು ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಆ ಕುಟುಂಬಗಳಿಗೆ ಮೃತಪಟ್ಟವರೇ ಏಕೈಕ ಜೀವನದ ಆಧಾರವಾಗಿದ್ದರು. ಈಗ ಆ ಆಧಾರಸ್ತಂಭಗಳೇ ಇಲ್ಲವಾಗಿರುವುದರಿಂದ ಅವರ ಕುಟುಂಬಗಳು ಬೀದಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕನಿಷ್ಠ 10 ಲಕ್ಷ ರೂಪಾಯಿ ಹಾಗೂ ಕೇಂದ್ರ ಸರ್ಕಾರವು 5 ಲಕ್ಷ ರೂಪಾಯಿ ಪರಿಹಾರ ಧನವನ್ನು ನೀಡುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ಅವರು ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.
ಇದನ್ನೂ ಓದಿ : ಹಾಸನ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯ ಆರ್ಭಟ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ಸಂಪೂರ್ಣ ನಾಶ
ಕೇವಲ ಈ ದುರಂತವಷ್ಟೇ ಅಲ್ಲದೆ ರಾಜ್ಯದ ಶೈಕ್ಷಣಿಕ ಮತ್ತು ಮೂಲಸೌಕರ್ಯದ ಅಧ್ವಾನಗಳ ಬಗ್ಗೆಯೂ ರೇವಣ್ಣ ಅವರು ಸರ್ಕಾರದ ಗಮನ ಸೆಳೆದಿದ್ದಾರೆ. ರಾಜ್ಯದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ತಕ್ಷಣವೇ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ವಿಶೇಷವಾಗಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಆ ಮೂಲಕ ಹಳ್ಳಿಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ನೋಡಿಕೊಳ್ಳಬೇಕು ಹಾಗೂ ಸರ್ಕಾರಿ ಶಾಲೆಗಳನ್ನು ಮುಚ್ಚುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಅವರು ಆಗ್ರಹಿಸಿದ್ದಾರೆ.
ಸಾರ್ವಜನಿಕರ ಪ್ರಾಣ ಉಳಿಸುವುದು ಮತ್ತು ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು ಎಂದು ಅವರು ತಿಳಿಸಿದ್ದಾರೆ. ರಾಜ್ಯದ ಅನೇಕ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದ್ದು ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವತ್ತ ಸರ್ಕಾರ ಗಮನ ಹರಿಸಬೇಕು. ಇದೇ ವೇಳೆ ರಾಜ್ಯದಲ್ಲಿ ಕೇಳಿ ಬರುತ್ತಿರುವ ಮುಖ್ಯಮಂತ್ರಿ ಬದಲಾವಣೆಯ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಸಿಎಂ ಬದಲಾವಣೆ ಎಂಬುದು ಆಡಳಿತ ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ. ರಾಜಕೀಯ ಮಾಡಲು 2028 ರ ವಿಧಾನಸಭಾ ಚುನಾವಣೆಯವರೆಗೂ ಸಮಯವಿದೆ. ಈಗ ಎಲ್ಲರೂ ಒಟ್ಟಾಗಿ ಜನರ ಬದುಕು ಉಳಿಸುವ ಮತ್ತು ಸಂಕಷ್ಟದಲ್ಲಿರುವವರಿಗೆ ನೆರವಾಗುವ ಕೆಲಸ ಮಾಡಬೇಕಿದೆ ಎಂದು ಅವರು ಕರೆ ನೀಡಿದ್ದಾರೆ.