ಬಳ್ಳಾರಿ ನಗರದಲ್ಲಿ ರಾತ್ರಿ ಗಸ್ತು ಭದ್ರತಾ ವ್ಯವಸ್ಥೆ ಪರಿಶೀಲನೆ ನಡೆಸಿ ಐಜಿಪಿ ಡಾ.ಪಿ.ಎಸ್ ಹರ್ಷ ಹೇಳಿಕೆ

IGP Dr. P.S. Harsha's statement after inspecting the night patrol security system in Ballari city
IGP Dr. P.S. Harsha's statement after inspecting the night patrol security system in Ballari city

ಬಳ್ಳಾರಿ: ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಡಾ.ಪಿ.ಎಸ್ ಹರ್ಷ ಅವರು ಬುಧವಾರ ರಾತ್ರಿ ಗಸ್ತು ನಡೆಸಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದರು.

ಸೂಕ್ಷ್ಮ ಪ್ರದೇಶಗಳಲ್ಲಿ ಸಂಚರಿಸಿದ ಬಳಿಕ ಮಾತನಾಡಿದ ಅವರು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದೆ. ಶಾಂತಿ ಭಂಗ ಉಂಟುಮಾಡುವವರ ವಿರುದ್ಧ ನಿಗಾ ವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದೆ ಎಂದು ಹೇಳಿದರು.

ಜಿಲ್ಲೆಯ ಗಡಿಭಾಗಗಳಲ್ಲಿ ವಿಶೇಷ ಚೆಕ್‌ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲೆಗಳಿಂದ ಆಗಮಿಸುವ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳ ಮೇಲೆ ನಿಗಾ ಇಡಲು ನಿರಂತರ ತಪಾಸಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಅದೇರೀತಿಯಾಗಿ ನಗರದ ಲಾಡ್ಜ್‌ಗಳು ಹಾಗೂ ವಸತಿ ನಿಲಯಗಳಲ್ಲಿ ಸಂಪೂರ್ಣ ತಪಾಸಣೆ ನಡೆಸಲಾಗುತ್ತಿದೆ ಎಂದರು.

ಬಳ್ಳಾರಿ ವಲಯದ ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಅಗತ್ಯ ಸಿಬ್ಬಂದಿಗಳನ್ನು ನೇಮಿಸಿಕೊಂಡು ನಿಗಾವಹಿಸಲಾಗಿದೆ. ವಿಶೇಷವಾಗಿ ಬಳ್ಳಾರಿ ನಗರದಲ್ಲಿ ವಲಯವಾರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಿದ್ದು, ಪಾಳಿಯಂತೆ ಕರ್ತವ್ಯ ನಿರ್ವಹಿಸಲಿದ್ದು, ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಲಾಗಿದೆ. ಕಾನೂನು ನಿಯಮ ಉಲ್ಲಂಘಿಸುವವರ ಅಥವಾ ಸಮಾಜದ ಶಾಂತಿ ಕದಡುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

IGP Dr. P.S. Harsha’s statement after inspecting the night patrol security system in Ballari city