ಬೆಂಗಳೂರು: ಮೇ 6 ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಮಂಡ್ಯದಲ್ಲಿ ಮೇ 6 ರವರೆಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ.
ಉತ್ತರ ಒಳನಾಡಿನ ಗದಗ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಹಾವೇರಿ, ಬೆಳಗಾವಿ, ಧಾರವಾಡ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಅಂತ ತಿಳಿಸಿದೆ.

ಏಪ್ರಿಲ್ 30ರಂದು ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹವಾಮಾನ ಸಂಸ್ಥೆಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಈಗಾಗಲೇ ಚಂಡಮಾರುತದ ಪರಿಚಲನೆ ರೂಪುಗೊಂಡಿದೆ ಮತ್ತು ಮರಾಠಾವಾಡ ಪ್ರದೇಶದಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಲಿಸುತ್ತಿದೆ. ಈ ಬದಲಾವಣೆ ಕರ್ನಾಟಕದ ಹವಾಮಾನ ಪರಿಸ್ಥಿತಿಗಳ ಮೇಲೆ ಪ್ರಭಾವ ಬೀರುತ್ತಿದೆ ಎನ್ನಲಾಗಿದೆ.

ಮೇ ತಿಂಗಳ ಕರ್ನಾಟಕ ಹವಾಮಾನ: ಮೇ 1 ರಿಂದ ಮೇ 3 ರವರೆಗೆ ಬೆಂಗಳೂರು ನಗರ, ದಾವಣಗೆರೆ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ನಂತರ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಮುಂಗಾರು ಪೂರ್ವ ಮಳೆಯಾಗುವ ನಿರೀಕ್ಷೆಯಿದೆ.

ಕರ್ನಾಟಕ ತಾಪಮಾನ ವ್ಯತ್ಯಾಸ: ಹವಾಮಾನ ಇಲಾಖೆಯ ಪ್ರಕಾರ, ಕರ್ನಾಟಕದ ಗರಿಷ್ಠ ತಾಪಮಾನವು ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಹಾವೇರಿ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಹೆಚ್ಚಿನ ತಾಪಮಾನ ದಾಖಲಾಗಿದೆ. ಮುಂದಿನ ಎರಡು ದಿನಗಳವರೆಗೆ ಮಳೆಯಾಗುವ ಪ್ರದೇಶಗಳಲ್ಲಿ ತಾಪಮಾನದಲ್ಲಿ ಸ್ವಲ್ಪ ಇಳಿಕೆಯಾಗಬಹುದು ಎನ್ನಲಾಗಿದೆ.
Follow Me