ಬೆಳಗಾವಿ: ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿಗೆ ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡುವ ಸಂಬಂಧ ಜಿಲ್ಲೆಯಿಂದ ನಿಗಧಿತ ನಮೂನೆಗಳಲ್ಲಿ ಜಿಲ್ಲೆಯ ಸಕ್ಷಮ ಪ್ರಾಧಿಕಾರಿಗಳಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ಮುಖಾಂತರ ಪ್ರಸ್ತಾವನೆಗಳು ಸ್ವೀಕೃತವಾದಲ್ಲಿ, ನಿಯಮಾನುಸಾರ ಅನುದಾನದ ಲಭ್ಯತೆಯನ್ನು ಆಧರಿಸಿ, ಆದ್ಯತೆ ಮೇಲೆ ಪರಿಶೀಲಿಸಲಾಗುವುದು ಎಂದು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ಸಮಯದಲ್ಲಿ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸಿಂಧನೂರು ತಾಲ್ಲೂಕಿನಲ್ಲಿ 05 ಸ್ನಾತಕೋತ್ತರ ಪದವಿ ಕಾಲೇಜುಗಳಿರುತ್ತವೆ. ಇಲ್ಲಿ 200ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಿಂಧನೂರು ತಾಲ್ಲೂಕಿನಲ್ಲಿ 05 ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ನಡೆಸಲಾಗುತ್ತಿದೆ. 02 ವಿದ್ಯಾರ್ಥಿ ನಿಲಯಗಳು ಸ್ವಂತ ಕಟ್ಟಡಗಳಲ್ಲಿ ಮತ್ತು 03 ವಿದ್ಯಾರ್ಥಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸ್ವಂತ ಕಟ್ಟಡದ ಮೂರು ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಿ, ವಿದ್ಯಾರ್ಥಿ ನಿಲಯವಾಗಿ ಬಳಸಿಕೊಳ್ಳಲಾಗುವುದು.
ಈ ಐದು ವಿದ್ಯಾರ್ಥಿ ನಿಲಯಗಳಲ್ಲಿ 2025-26ನೇ ಸಾಲಿಗೆ 1573 ಸಂಖ್ಯೆ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿರುತ್ತದೆ ಎಂದು ಸಚಿವರು ತಿಳಿಸಿದರು.













Follow Me