ಬೆಳಗಾವಿ: ಗ್ಯಾರಂಟಿ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳ ಜನಸಂಖ್ಯೆಗೆ ಅನುಗುಣವಾಗಿ ಎಸ್‍ಸಿಎಸ್‍ಪಿ ಹಾಗೂ ಟಿಎಸ್‍ಪಿ ಅನುದಾನವನ್ನು ಬಳಕೆ ಮಾಡಿದ್ದು, ಹಣ ದುರ್ಬಳಕೆಯಾಗಿಲ್ಲ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯೆ ಹೇಮಲತಾ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎಸ್‍ಸಿಎಸ್‍ಪಿ ಹಾಗೂ ಟಿಎಸ್ಪಿ ಕಾಯ್ದೆಯ ಸೆಕ್ಷನ್ 7(ಸಿ) ರಡಿ ಸಾಮಾನ್ಯ ಸಾಮಾಜಿಕ ವಲಯದ ಕಾರ್ಯಕ್ರಮಗಳ ಫಲಾನುಭವಿಗಳ ಜನಸಂಖ್ಯೆಯ ಪ್ರಮಾಣಕ್ಕನುಗುಣವಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿಯಲ್ಲಿ ಅನುದಾನವನ್ನು ಹಂಚಿಕೆ ಮಾಡಿ ಉಪಯೋಗಿಸಲು ಅವಕಾಶವಿರುತ್ತದೆ. ಅದರಂತೆ, ಗ್ಯಾರಂಟಿ ಯೋಜನೆಗಳಿಗೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿಯಲ್ಲಿ ಅನುದಾನ ಹಂಚಿಕೆ ಮಾಡಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳಿಗೆ ಉಪಯೋಗಿಸಲಾಗುತ್ತಿದೆ.

ಅದರಂತೆ, ಪ್ರಾರಂಭದಿಂದಲೂ ಈ ಕಾಯ್ದೆಯ ಸೆಕ್ಷನ್ 7(ಸಿ) ಪ್ರಕಾರ ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ನೀರಾವರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಯೋಜನಾ ಇಲಾಖೆ, ಇಂಧನ ಇತ್ಯಾದಿ ಇಲಾಖೆಗಳಲ್ಲಿ ಎಲ್ಲರಿಗೂ ಅನ್ವಯವಾಗುವ ಯೋಜನೆಗಳು ಜಾರಿಯಲ್ಲಿದ್ದು, ಈ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳ ಸಮಗ್ರ ಅಭಿವೃದ್ಧಿಗಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿಯಲ್ಲಿ ಅನುದಾನವನ್ನು ಹಂಚಿಕೆ ಮಾಡಿ ಉಪಯೋಗಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.













Follow Me