ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Siddaramaiah
Siddaramaiah

ಹಾವೇರಿ : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಹಾವೇರಿ ವೈದ್ಯಕೀಯ ವಿಜ್ಞಾನ ಗಳ ಸಂಸ್ಥೆಯ ಉದ್ಘಾಟನೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ವನ್ನು ನೆರವೇರಿಸಿ ಮಾತನಾಡಿದರು.

ಕಳೆದ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಘೋಷಿಸಿದ್ದ ಹಾವೇರಿ ವೈದ್ಯಕೀಯ ವಿಜ್ಞಾನ ಗಳ ಸಂಸ್ಥೆಯನ್ನು ಘೋಷಿಸಿದ್ದೆ. ಉಪಮುಖ್ಯಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಘೋಷಣೆ ಮಾಡಿದ್ದೆ ಎಂದು ಸ್ಮರಿಸಿದರು.

ಇದನ್ನು ಮಿಸ್‌ ಮಾಡದೇ ಓದಿ :toxic ನಟ ಯಶ್‌ ಅಭಿನಯದ ಸಿನಿಮಾದ ಟೀಸರ್‌ ಬಿಡುಗಡೆ

ಇದನ್ನು ಮಿಸ್‌ ಮಾಡದೇ ಓದಿ : madhav gadgil ಖ್ಯಾತ ಪರಿಸರವಾದಿ ಮಾಧವ ಗಾಡ್ಗೀಳ್ ನಿಧನ

ಕರ್ನಾಟಕದಲ್ಲಿ ಇಂದು ಸುಮಾರು 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ವಿಜಯಪುರ ಜಿಲ್ಲೆ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಸ್ಥಳೀಯವಾಗಿ ಆರೋಗ್ಯ ಸೇವೆಗಳು ದೊರಕಬೇಕು: ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಾಗಿದ್ದು, ಬಡವರೆಲ್ಲರೂ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಬಹಳ ದುಬಾರಿ. ದುಬಾರಿ ಚಿಕಿತ್ಸೆಯನ್ನು ಸಾಮಾನ್ಯ ಜನರು ಧರಿಸುವುದು ಕಷ್ಟ. ಸ್ಥಳೀಯವಾಗಿ ಆರೋಗ್ಯ ಸೇವೆ ನೀಡಬೇಕಾದರೆ ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಸೆಂಟರ್ ಇರಲೇಬೇಕು ಎಂದರು.

ಎಲ್ಲರನ್ನೂ ಒಳಗೊಂಡಿರುವ ಸರ್ಕಾರ: ನಮ್ಮದು ಎಲ್ಲರನ್ನೂ ಒಳಗೊಂಡಿರುವ ಸರ್ಕಾರ. ಯಾವುದೇ ಧರ್ಮ, ಜಾತಿ, ಪಕ್ಷಕ್ಕೆ ಸೇರಿದವರಾಗಿದ್ದರು ಅವರನ್ನು ಭೇದ ಭಾವವಿಲ್ಲದೆ, ಸೀಮಾತೀತವಾಗಿ ಕಾಣುತ್ತೇವೆ. ಎಲ್ಲ ಜಾತಿ, ಧರ್ಮ, ಪಕ್ಷಗಳಿಗೆ ಸೇರಿದ ಬಡವರಿಗೆ ನಮ್ಮ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಬಡವರಿಗೆ ಆರ್ಥಿಕ ಸಾಮಾಜಿಕ ಶಕ್ತಿ ತುಂಬುವುದು ಇಂದಿನ ಅಗತ್ಯವಾಗಿದ್ದು ಸಂವಿಧಾನದಲ್ಲಿ ಜಾತಿ, ವರ್ಗ ರಹಿತವಾದ ಸಮಾಜ ನಿರ್ಮಾಣ ಮಾಡಬೇಕು ಎಂದು ಸ್ಪಷ್ಟವಾಗಿ ಹೇಳಿದೆ. ಕಟ್ಟಕಡೆಯ ಮನುಷ್ಯನಿಗೂ ಆರ್ಥಿಕ, ಸಾಮಾಜಿಕ ಸೌಲಭ್ಯ ದೊರಕಬೇಕು. ಆಗ ಮಾತ್ರ ಸಂವಿಧಾನದ ಆಶಯವಾದ ಜಾತ್ಯತೀತ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಇದನ್ನು ನಮ್ಮ ಸರ್ಕಾರ ಚಾಚೂ ತಪ್ಪದೇ ಮಾಡುತ್ತಿದೆ ಎಂದರು.

ಪ್ರತಿ ವರ್ಷ 52000 ಕೋಟಿ ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ: ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆಗಳು ಕೇಳಿ ಬಂದಾಗ ನಾವು ಯೋಜನೆ ನಿಲ್ಲಿಸಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಮೊದಲನೇ ವರ್ಷದಲ್ಲಿಯೇ ಜಾರಿ ಮಾಡಲಾಗಿದೆ. ಒಂದು ಲಕ್ಷದ 12 ಸಾವಿರ ಕೋಟಿ ರೂಪಾಯಿ ಗಳನ್ನು ಎರಡುವರೆ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಿದ್ದರೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿಲ್ಲ. ಪ್ರತಿ ವರ್ಷ 52000 ಕೋಟಿ ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ ಎಂದರು.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ: ಜನರು ತಪ್ಪು ತಿಳಿದುಕೊಳ್ಳುವ ರೀತಿಯಲ್ಲಿ ಅಪಪ್ರಚಾರವಾಗುತ್ತಿದೆ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು ಹಾವೇರಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡ, ಪ್ರವಾಸಿ ಮಂದಿರ, ವಾಲ್ಮೀಕಿ ಭವನ, ನೂತನ ಗ್ರಂಥಾಲಯ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆ 250 ರಿಂದ 500 ಹಾಸಿಗೆಗಳ ಆಸ್ಪತ್ರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ. ಹಾವೇರಿ ವೈದ್ಯಕೀಯ ಕಾಲೇಜಿಗೆ ಸುಮಾರು 500 ಕೋಟಿ ವೆಚ್ಚ ಮಾಡಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರ 194 ಕೋಟಿ ನೀಡಿದ್ದು, 300ಕ್ಕೂ ಹೆಚ್ಚು ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಭರಿಸಿದೆ ಎಂದರು.

ಮಹದಾಯಿ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ 3 ನೇ ಹಂತ ಜಾರಿಯಾಗಲೇಬೇಕು: ನೀರಾವರಿ ಯೋಜನೆಗಳಿಗೆ ವೇಗ ನೀಡಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿಯೇ ಸಮಿತಿ ರಚಿಸೋಣ ಎಂದ ಮುಖ್ಯಮಂತ್ರಿಗಳು ಮಹದಾಯಿ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ 3 ನೇ ಹಂತ ಜಾರಿಯಾಗಲೇಬೇಕು ಎಂದರು. ಪ್ರಕರಣ ಸುಪ್ರೀಂಕೋರ್ಟಿನಲ್ಲಿದ್ದರೂ ಅಫಿಡವಿಟ್ ಸಲ್ಲಿಸಿ ವಾಪಸ್ಸು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದುವರೆಯೋಣ ಎಂದರು. ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಳ್ಳಲೇಬೇಕು ಇಲ್ಲದಿದ್ದರೆ ರಾಜ್ಯಕ್ಕೆ ಹಂಚಿಕೆಯಾಗಿರುವ 173 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದರು.

ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಆಸಕ್ತಿ ವಹಿಸಲಿ ಎಂದು ಒತ್ತಾಯಿಸಿದರು. ಪರಿಸರ ತೀರುವಳಿ ದೊರಕಿಸಲು ಪ್ರಯತ್ನಿಸಬೇಕು ಎಂದರು.

ಜ್ಯಾತ್ಯತೀತ ಸಮಾಜ ನಿರ್ಮಾಣವಾಗದೆ ಹೋದರೆ, ಅಸಮಾನತೆ ನೀಗಿಸಲು ಸಾಧ್ಯವಿಲ್ಲ. ಎಲ್ಲರಿಗೂ ಆರ್ಥಿಕ ಸಾಮಾಜಿಕ ಶಕ್ತಿ ಬಂದಾಗ ಮಾತ್ರ ಸ್ವಾತಂತ್ರ್ಯ ಯಶಸ್ವಿಯಾಗಲು ಸಾಧ್ಯ ಎಂದರು.

ಮನುಷ್ಯ ಸಮಾಜ ನಿರ್ಮಾಣ ನಮ್ಮ ನಂಬಿಕೆ : ಹಾವೇರಿ ಜಿಲ್ಲೆ ಸರ್ವಜ್ಞ, ಕನಕದಾಸರು ಹಾಗೂ ಶಿಶುನಾಳ ಶರೀಫರ ನಾಡು. ಇವರೆಲ್ಲರೂ ಸಮಾಜದಲ್ಲಿ ಸುಧಾರಣೆಯಾಗಿ ಮನುಷ್ಯ ಸಮಾಜ ನಿರ್ಮಾಣವಾಗಬೇಕೆಂದು ಸಾರಿದವರು. ಮನುಷ್ಯರು ಪರಸ್ಪರ ಪ್ರೀತಿಸಬೇಕೆಂದು ಹೇಳುತ್ತದೆಯೇ ಹೊರತು ದ್ವೇಷಿಸಲು ಯಾವ ಧರ್ಮಗಳು ಹೇಳುವುದಿಲ್ಲ. ಇದರಲ್ಲಿ ನಂಬಿಕೆ ಇಟ್ಟವರು ನಾವು ಎಂದರು.

ವೈಜ್ಞಾನಿಕ ಚಿಂತನೆ ಎಲ್ಲರಲ್ಲಿ ಬಂದಾಗ ಮಾತ್ರ ಜಾತ್ಯತೀಯ ಸಮಾಜ ನಿರ್ಮಾಣ ಸಾಧ್ಯ : ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ, ಕನಕದಾಸರು, ನಾರಾಯಣಗುರುಗಳು ಹಾಕಿಕೊಟ್ಟ ಮಾರ್ಗದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ ಎಂದರು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಗಿದೆ. ಜಾತಿ ವಿನಾಶ, ಕಂದಾಚಾರ, ಮೌಢ್ಯ ತೊಲಗಬೇಕೆಂದು ಬಸವಣ್ಣನವರು ಹೇಳಿದ್ದಾರೆ. ವೈಚಾರಿಕತೆ, ವೈಜ್ಞಾನಿಕ ಚಿಂತನೆ ಎಲ್ಲರಲ್ಲಿ ಬಂದಾಗ ಮಾತ್ರ ಜಾತ್ಯತೀಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.ಈ ದಿಸೆಯಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ. ಹಾವೇರಿ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಲು ಸರ್ಕಾರ ಎಲ್ಲಾ ಪ್ರಯತ್ನ ಮಾಡಲಿದೆ ಎಂದರು.

Super Specialty Hospital for Haveri District: Chief Minister Siddaramaiah