CM Siddaramaiah | ಕೆರೆಗಳಿಗೆ ನೀರು ನಮ್ಮ ಆರನೇ ಗ್ಯಾರಂಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Siddaramaiah
Image credit: https://www.facebook.com/Siddaramaiah.Official

ಚಿಕ್ಕಬಳ್ಳಾಪುರ: ಖಜಾನೆ ಖಾಲಿ ಎನ್ನುವ ವಿರೋಧ ಪಕ್ಷಗಳ ಸುಳ್ಳಿನ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಹೈಟೆಕ್ ರೇಶ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಉದ್ಘಾಟನೆಯಾದ ಹೈಟೆಕ್ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಶ್ಮೆ ಬೆಳೆಗಾರರಿಗೆ ಅನುಕೂಲ ಆಗಲಿದೆ ಎಂದರು.

ಶಿಡ್ಲಘಟ್ಟ ಕ್ಷೇತ್ರದಲ್ಲಿ ಇಷ್ಟು ದೊಡ್ಡ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುತ್ತಿರುವುದು ನಮ್ಮ ಸರ್ಕಾರದ ಅಭಿವೃದ್ಧಿ ಪರ್ವದ ವೇಗವನ್ನು ತೋರಿಸುತ್ತಿದೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ. ಗ್ಯಾರಂಟಿ ಕಾರ್ಯಕ್ರಮಗಳಿಗೆ ಒಂದು ಲಕ್ಷ ಕೋಟಿಗೂ ಅಧಿಕ ಮೊತ್ತದ ಹಣ ಇದುವರೆಗೂ ತೆಗೆದಿಟ್ಟಿರುವುದು ಮಾತ್ರವಲ್ಲದೆ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನೂ ನಾವು ನಡೆಸುತ್ತಿದ್ದೇವೆ. ಇದಕ್ಕೆ ಇಂದು ಇಲ್ಲಿ ಉದ್ಘಾಟನೆಗೊಂಡ ಅಭಿವೃದ್ಧಿಯೂ ಸೇರಿದೆ ಎಂದರು.

ಇದನ್ನು ಮಿಸ್‌ ಮಾಡದೇ ಓದಿ: ಸಿಸಿಟಿವಿ ಅಳವಡಿಕೆ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಇದನ್ನು ಮಿಸ್‌ ಮಾಡದೇ ಓದಿ: ಡಿಸೆಂಬರ್ 13ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್

ನಮ್ಮ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ಯಾವ ಗ್ಯಾರಂಟಿ ಯೋಜನೆಗಳೂ ನಿಲ್ಲುವುದಿಲ್ಲ. ಜೊತೆಗೆ ಸಣ್ಣ ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಅಭಿವೃದ್ಧಿ ನಡೆಸುತ್ತಿದ್ದೇವೆ ಎನ್ನುವುದನ್ನು ಅಂಕಿ ಅಂಶಗಳ ಸಮೇತ ವಿವರಿಸಿದರು.

ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ: ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ ಬೇಕು ಎನ್ನುವುದೂ ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಸುಧಾಕರ್ ಮತ್ತು ಕ್ಷೇತ್ರದ ಶಾಸಕರು ಬೇಡಿಕೆ ಇಟ್ಟಿದ್ದಾರೆ. ಸಚಿವರ ಮನವಿಯಂತೆ ಎಲ್ಲಾ ಕಾಮಗಾರಿಗಳಿಗೂ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಸಮಾಜದ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ಬರಬೇಕು, ಜಾತಿ ವ್ಯವಸ್ಥೆ ಮತ್ತು ವರ್ಗ ವ್ಯವಸ್ಥೆ ಹೋಗಬೇಕು ಆಗ ಮಾತ್ರ ದೇಶಕ್ಕೆ ಬಂದಿರುವ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದಿದ್ದರು. ಹೀಗಾಗಿ ನಮ್ಮ ಸರ್ಕಾರ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದೆ. ನಮ್ಮದು ಸರ್ವ ಧರ್ಮ ಮತ್ತು ಸರ್ವ ಜಾತಿಯವರನ್ನು ಒಳಗೊಳ್ಳುವ ಸರ್ಕಾರ ಎಂದರು.

Siddaramaiah
Image credit: https://www.facebook.com/Siddaramaiah.Official

ನಾವು ಜನರನ್ನು ಮತ್ತು ಸಮಾಜವನ್ನು ಬೆಸೆಯುವ ಮೂಲಕ ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇವೆ. ಶಿಡ್ಲಘಟ್ಟದ ನೇಕಾರ ಸಮುದಾಯಕ್ಕೂ ಅನುಕೂಲ ಮಾಡಿಕೊಡಲಾಗುವುದು. ನಾವು ನುಡಿದಂತೆ ನಡೆಯುತ್ತಿದ್ದೇವೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಹೀಗಾಗಿ 2028 ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದರು.

2027 ಕ್ಕೆ ಜಿಲ್ಲೆಗೆ ಎತ್ತಿನಹೊಳೆ ನೀರು ಕೆರೆಗಳಿಗೆ ನೀರು ನಮ್ಮ ಆರನೇ ಗ್ಯಾರಂಟಿ: ಜಿಲ್ಲೆಯ ಶಾಸಕರು ಪಂಚ ಪಾಂಡವರಂತೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. 2 ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ ಧೋರಣೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ಕ್ಷೇತ್ರದ ಅಭಿವೃದ್ಧಿಗೆ ಇಡೀ ಸರ್ಕಾರವೇ ಬಂದಿದೆ ಎಂದರೆ ನಮಗೆ ಜನರ ಮೇಲಿನ ಪ್ರೀತಿಯೇ ಕಾರಣ ಎಂದು ಹೇಳಿದರು.

Siddaramaiah
Image credit: https://www.facebook.com/Siddaramaiah.Official

ರಾಜ್ಯದ ಪ್ರತಿ ಮಹಿಳೆಯರು ಅವರ ಖಾತೆಗೆ ಹಣ ಬಂದಾಗಲೆಲ್ಲಾ ನಮ್ಮ ಸರ್ಕಾರವನ್ನು ನೆನಪಿಸಿಕೊಳ್ಳುತ್ತಾರೆ. ಯಾವುದೇ ಪುಣ್ಯ ಕ್ಷೇತ್ರಗಳಿಗೆ ಹೋದರೂ ನಮ್ಮ ಒಳಿತಿಗೆ ಪ್ರಾರ್ಥನೆ ಮಾಡುತ್ತಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬಂದಾಗ ಮಹಿಳೆಯರು ಗೌರವದಿಂದ ಅವರಿಗೆ ನಮಿಸಿದರು. ಮಹಿಳೆಯರ ಬದುಕಿನಲ್ಲಿ ನಾವು ತಂದಿರುವ ಬದಲಾವಣೆಯನ್ನು ಇಡೀ ದೇಶವೇ ನೋಡುತ್ತಿದೆ ಎಂದರು.

ಸತ್ಯಕ್ಕೂ ಸುಳ್ಳಿಗೂ ಎಷ್ಟು ಅಂತರ ಎಂದು ಅಕ್ಬರ್ ಒಮ್ಮೆ ಬೀರಬಲ್ ಅವರನ್ನು ಕೇಳುತ್ತಾನೆ. ಆಗ ಬೀರಬಲ್ ನಾಲ್ಕು ಬೆರಳಿನ ಅಂತರ ಎಂದು ಹೇಳುತ್ತಾರೆ. ಕಣ್ಣಲ್ಲಿ ನೋಡುವುದು ಸತ್ಯ, ಕಿವಿಯಲ್ಲಿ ಕೇಳುವುದು ಸುಳ್ಳು. ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ 2 ಸಾವಿರ ಕೋಟಿ ಮೊತ್ತವನ್ನು ನೀಡಿದೆ. ಇದಕ್ಕೆ ನಿಮ್ಮೆಲ್ಲರ ಕಣ್ಣುಗಳೇ ಸಾಕ್ಷಿ ಎಂದು ಹೇಳಿದರು.

Siddaramaiah
Image credit: https://www.facebook.com/Siddaramaiah.Official

2027 ಕ್ಕೆ ಜಿಲ್ಲೆಗೆ ಎತ್ತಿನಹೊಳೆ ನೀರು: ಸಚಿವರಾದ ಕೆ.ಎಚ್.ಮುನಿಯಪ್ಪ ಅವರು, ಸುಧಾಕರ್ ಅವರು ಹಾಗೂ ಕೃಷ್ಣಬೈರೇಗೌಡರು ನನ್ನ ಬೆನ್ನತ್ತಿದ್ದು 2027 ರ ಹೊತ್ತಿಗೆ ಎರಡು ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಹರಿಸಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪೂರಕವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ನಾವು ಪರ್ಯಾಯವಾಗಿ ಕಂದಾಯ ಭೂಮಿ ನೀಡಿದ್ದರೂ ಕೇಂದ್ರ ಪರಿಸರ ಇಲಾಖೆ ಅರಣ್ಯ ಭೂಮಿ ಬಳಕೆಗೆ ಅನುಮತಿ ನೀಡುತ್ತಿಲ್ಲ ಎಂದರು.

ಕೆ.ಸಿ. ವ್ಯಾಲಿ ಯೋಜನೆಯ ಮೊದಲ ಹಂತದಲ್ಲಿ 143 ಕೆರೆ ತುಂಬಿಸಲಾಗಿದೆ. 2ನೇ ಹಂತದಲ್ಲಿ 272 ಕೆರೆ ಭರ್ತಿ ಮಾಡುತ್ತಿದ್ದೇವೆ. ಈ ಯೋಜನೆಯನ್ನು ವಿಶ್ವಬ್ಯಾಂಕ್ ಕೂಡ ಹೊಗಳಿದೆ. ಎಚ್.ಎನ್.ವ್ಯಾಲಿ ಯೋಜನೆಯ ಮೊದಲ ಹಂತದಲ್ಲಿ 65 ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಬೆಂಗಳೂರಲ್ಲಿ ಕೆರೆಗಳ ಇಂಟರ್ ಲಿಂಕ್ ಮಾಡೋಕೆ ಅಂತ 1700 ಕೋಟಿ ರೂಪಾಯಿ ಮೊತ್ತದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ನೆಲಮಂಗಲದಲ್ಲಿ ವೃಷಭಾವತಿಯಿಂದ 70 ಕೆರೆ ತುಂಬಿಸಲಾಗುತ್ತಿದೆ ಎಂದರು.

ಕೆರೆಗಳಿಗೆ ನೀರು ನಮ್ಮ ಆರನೇ ಗ್ಯಾರಂಟಿ: ಕೆರೆಗಳನ್ನು ತುಂಬಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ. ವ್ಯವಸಾಯಕ್ಕೆ ಹಾಗೂ ಕುಡಿಯುವುದಕ್ಕೆ ನೀರನ್ನು ನೀಡುವುದೇ ನಮ್ಮ ಉದ್ದೇಶ. ಏಳನೇ ಗ್ಯಾರಂಟಿಯಾಗಿ 1,11,11,111 ಜನರಿಗೆ ಖಾತೆಗಳನ್ನು ನೀಡಿ ಭೂಮಿ ಗ್ಯಾರಂಟಿ ನೀಡಿದ್ದೇವೆ. ಹತ್ತು ಕಿಲೋ ಅಕ್ಕಿ ನೀಡುತ್ತಿದ್ದೆವು. ಆದರೆ ಐದು ಕಿಲೋ ಅಕ್ಕಿಯನ್ನು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದ ಕಾರಣಕ್ಕೆ ಅಡುಗೆ ಎಣ್ಣೆ, ಬೇಳೆಕಾಳುಗಳ ಕಿಟ್ ನೀಡುವ ಆಲೋಚನೆ ಮಾಡಿದ್ದೇವೆ. ಶೀಘ್ರದಲ್ಲೆ ಎಲ್ಲರಿಗೂ ಈ ಯೋಜನೆ ತಲುಪಲಿದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಮತ್ತು ಕೋಲಾರದ ಜನತೆ ಬಗ್ಗೆ ನನಗೆ ಅಪಾರ ಗೌರವ. ಏಕೆಂದರೆ ನೀವು ಶ್ರಮ ಜೀವಿಗಳು, ನೀರಿನ ಬೆಲೆ ಅರಿತಿರುವವರು. ತರಕಾರಿ, ಹೂ, ಹಣ್ಣು ಸೇರಿದಂತೆ ಅನೇಕ ಕೃಷಿ ಉತ್ಪನ್ನಗಳನ್ನು ರಾಜ್ಯಕ್ಕೆ ನೀಡುತ್ತಿರುವವರು. ಅಶುದ್ಧ ನೀರನ್ನು ಶುದ್ಧೀಕರಣಗೊಳಿಸಿ ಅದನ್ನು ನಿಮ್ಮ ಕೆರೆಗಳಿಗೆ ಹರಿಸುವ ಕೆಲಸ ಮಾಡಲಾಗುತ್ತಿದೆ. ಇಡೀ ದೇಶವೇ ಈ ಯೋಜನೆಯನ್ನು ಹೊಗಳುತ್ತಿದೆ ಎಂದು ಹೇಳಿದರು.

ಶಿಡ್ಲಘಟ್ಟದ ನೀರು ಅತ್ಯುತ್ತಮವಾದುದು, ರೇಶ್ಮೆ ನೂಲು ಉತ್ತಮವಾಗಿ ಬರುತ್ತದೆ ಎಂದು ಇಲ್ಲಿಂದ ಟ್ಯಾಂಕರ್ ನಲ್ಲಿ ನೀರು ತಂದು ನಮ್ಮ ಊರಿನಲ್ಲಿ ನೂಲು ತೆಗೆಯಲಾಗುತ್ತದೆ. ಚೈನಾದಿಂದ ರೇಶ್ಮೆ ಆಮದು ಕಡಿಮೆಯಾದ ಕಾರಣಕ್ಕೆ ನಮ್ಮರೇಶ್ಮೆ ಗೆ ಅತ್ಯುತ್ತಮ ಬೆಲೆ ಬಂದಿದೆ. ಈಗ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಸೇರಿದಂತೆ ಅನೇಕ ಕಡೆ ರೇಶ್ಮೆ ಬೆಳೆಯಲಾಗುತ್ತಿದೆ ಎಂದರು.

ಪಂಚ ಪಾಂಡವರಂತೆ ಜಿಲ್ಲೆಯ ಅಭಿವೃದ್ದಿಗೆ ಕೆಲಸ: ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚೆಂದ, ಈ ಧಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ ಎಂದು ಹೇಳಿದ್ದೇನೆ. ಡಾ.ಸುಧಾಕರ್ ಅವರು, ಸುಬ್ಬಾರೆಡ್ಡಿ ಅವರು, ಪುಟ್ಟಸ್ವಾಮಿ ಗೌಡರು, ಪ್ರದೀಪ್ ಈಶ್ವರ್ ಅವರು, ರವಿಕುಮಾರ್ ಅವರು ಜಿಲ್ಲೆಯ ಅಭಿವೃದ್ದಿಗೆ ಕೈ ಜೋಡಿಸಿ ಪಂಚ ಪಾಂಡವರಂತೆ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಜನರ, ಸಮಾಜದ ಋಣ ತೀರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ.ಸುಧಾಕರ್, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು, ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಸುರೇಶ್ ಬಿ.ಎಸ್, ಶಾಸಕರುಗಳಾದ ಬಿ.ಎನ್. ರವಿಕುಮಾರ್, ಎಸ್.ಎನ್. ಸುಬ್ಬಾರೆಡ್ಡಿ, ಪ್ರದೀಪ್ ಈಶ್ವರ್ ಪಿ.ಇ, ಕೆ.ಹೆಚ್. ಪುಟ್ಟಸ್ವಾಮಿಗೌಡ, ಡಾ. ಹೆಚ್.ನರಸಿಂಹಯ್ಯ ವಿಜ್ಞಾನ ಶೈಕ್ಷಣಿಕ ಸಾಂಸ್ಕøತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್.ಶಿವಶಂಕರರೆಡ್ಡಿ, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ. ಡಾ. ವೈ. ನವೀನ್ ಕುಮಾರ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲುಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.