ಇದೇ ತಿಂಗಳ 29 ರಿಂದ ಆರಂಭವಾಗಲಿರುವ ಪ್ರಸಿದ್ಧ ಶ್ರೀ ಹಾಸನಾಂಬ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಮತ್ತು ವಿಜೃಂಭಣೆಯಿಂದ ನೆರವೇರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಂ. ಶಿವಲಿಂಗೇಗೌಡ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಹಾಸನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರು ದಸರಾ ಮಾದರಿಯಲ್ಲಿಯೇ ನಗರದಾದ್ಯಂತ ಆಕರ್ಷಕ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.
ಜಾತ್ರೋತ್ಸವಕ್ಕೆ ಆಗಮಿಸುವ ಸಾರ್ವಜನಿಕ ಭಕ್ತಾದಿಗಳಿಗೆ ಸುಗಮ, ಸುರಕ್ಷಿತ ಹಾಗೂ ತ್ವರಿತ ದರ್ಶನ ಕಲ್ಪಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಗಂಟೆಗಟ್ಟಲೆ ಸರತಿಯಲ್ಲಿ ನಿಂತು ತೊಂದರೆ ಅನುಭವಿಸುವುದನ್ನು ತಪ್ಪಿಸಲು ಈ ಬಾರಿ ದರ್ಶನದ ಪಾಸ್‌ಗಳ ಸಂಖ್ಯೆಯನ್ನು ಕಡಿತಗೊಳಿಸಲಾಗುವುದು. ಗಣ್ಯರ ದರ್ಶನಕ್ಕೆ ನಿಗದಿತ ಸಮಯ ನಿಗದಿಪಡಿಸುವುದರ ಜೊತೆಗೆ, ಸಣ್ಣ ಮಕ್ಕಳೊಂದಿಗೆ ಬರುವ ತಾಯಂದಿರಿಗೆ ಪ್ರತ್ಯೇಕ ಸರತಿ ಸಾಲಿನ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ. ಇನ್ನು ಟೆಂಡರ್ ಪ್ರಕ್ರಿಯೆಗಳನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಕ್ರಮವಹಿಸಲಾಗಿದ್ದು, ಅಧಿಕಾರಿಗಳು ಯಾವುದೇ ಅಪಾದನೆಗಳಿಗೆ ಎದೆಗುಂದದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಹಸನಾಂಬ ಜಾತ್ರೆಯ ಅಂಗವಾಗಿ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಒಂದು ವಾರಗಳ ಕಾಲ ಫಲಪುಷ್ಪ ಪ್ರದರ್ಶನ, ಶ್ವಾನ ಪ್ರದರ್ಶನ, ಜಾನುವಾರು ಪ್ರದರ್ಶನ ಹಾಗೂ ವಸ್ತುಪ್ರದರ್ಶನಗಳನ್ನು ಆಯೋಜಿಸಲು ಸೂಚಿಸಲಾಗಿದೆ. ಜಾನುವಾರು ಪ್ರದರ್ಶನದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಪ್ರಮಾಣಪತ್ರ ಮತ್ತು ಸ್ಮರಣಿಕೆಗಳನ್ನು ನೀಡಲಾಗುವುದು ಹಾಗೂ ಉತ್ತಮ ತಳಿಯ ರಾಸುಗಳಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು. ಸಭೆಯಲ್ಲಿದ್ದ ಶಾಸಕ ಸ್ವರೂಪ್ ಪ್ರಕಾಶ್ ಅವರು, ಜಾತ್ರೆಗೂ ಮುನ್ನವೇ ನಗರದ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಾತ್ರೋತ್ಸವದ ವೇಳೆ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ತಾತ್ಕಾಲಿಕ ಶೌಚಾಲಯಗಳ ಸಮರ್ಪಕ ನಿರ್ವಹಣೆಗೆ ಪೌರಕಾರ್ಮಿಕರನ್ನು ಪಾಳಿ ಆಧಾರದಲ್ಲಿ ನಿಯೋಜಿಸಲು ಸಚಿವರು ಸೂಚಿಸಿದ್ದಾರೆ. ಭಕ್ತರಿಗೆ ಕುಡಿಯುವ ನೀರು, ಉಚಿತ ಮಜ್ಜಿಗೆ ವಿತರಣೆ, ನೆರಳಿನ ಪೆಂಡಾಲ್, ಪ್ರಸಾದ ದಾಸೋಹ, ತಡೆರಹಿತ ವಿದ್ಯುತ್ ಪೂರೈಕೆ, ವಾಹನ ಪಾರ್ಕಿಂಗ್ ಮತ್ತು ಸಂಚಾರ ಸುಗಮಗೊಳಿಸಲು ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗುವುದು.
ಈ ಸುಸಂದರ್ಭದಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ಜಿಲ್ಲಾ ಪಂಚಾಯತ್ ಸಿಇಒ ಶುಭಂ ಶುಕ್ಲ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ ಹಾಗೂ ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.