ಬೆಂಗಳೂರು: ರಾಜ್ಯ ಸರ್ಕಾರವು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕ್ಷೇತ್ರವಾರು ಮೀಸಲಾತಿಯ ಕರಡು ಅಧಿಸೂಚನೆಯನ್ನು ಅಧಿಕೃತವಾಗಿ ಹೊರಡಿಸಿದ್ದು, ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳು 2023ರ ನಿಯಮ 6ರ ಅನ್ವಯ ಈ ಕರಡು ಅಧಿಸೂಚನೆ ಪ್ರಕಟಗೊಂಡಿದೆ. ಆಸಕ್ತರು ಹಾಗೂ ಸಾರ್ವಜನಿಕರು ಬರುವ ಅಕ್ಟೋಬರ್ 19, 2026ರ ಸಂಜೆ 5 ಗಂಟೆಯ ಒಳಗಾಗಿ ಸೂಕ್ತ ಪೂರಕ ದಾಖಲೆಗಳೊಂದಿಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಆಕ್ಷೇಪಣೆಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ "ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್ ರಾಜ್), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಹುಮಹಡಿಗಳ ಕಟ್ಟಡ, 3ನೇ ಹಂತ, 3ನೇ ಮಹಡಿ, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001" ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಲು ಸೂಚಿಸಲಾಗಿದೆ.
ರಾಜ್ಯದ ಒಟ್ಟು 31 ಜಿಲ್ಲಾ ಪಂಚಾಯತ್‌ಗಳಲ್ಲಿ 1,129 ಹಾಗೂ ತಾಲೂಕು ಪಂಚಾಯತ್‌ಗಳಲ್ಲಿ 3,656 ಸದಸ್ಯ ಸ್ಥಾನಗಳನ್ನು ನಿಗದಿಪಡಿಸಲಾಗಿದ್ದು, ಈ ಎಲ್ಲಾ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇಕಡಾ 50ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರವು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಂಪೂರ್ಣ ಬದ್ಧವಾಗಿದ್ದು, ಈಗಾಗಲೇ ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ನಿಗದಿಯ ಪ್ರಮುಖ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ. ಪ್ರಸ್ತುತ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಡೆಯುತ್ತಿದ್ದು, ಕೇಂದ್ರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ ಲಭ್ಯವಾಗುವುದು ತಡವಾದರೆ, ಜನವರಿ ತಿಂಗಳಿನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ, ಸರ್ಕಾರ ಸಲ್ಲಿಸಿದ್ದ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗದ ಸಮ್ಮತಿಗೆ ಕಳುಹಿಸಿಕೊಟ್ಟಿತ್ತು. ಇದೀಗ ಕೇಂದ್ರ ಚುನಾವಣಾ ಆಯೋಗದಿಂದ ಹಸಿರು ನಿಶಾನೆ ದೊರೆತ ಬೆನ್ನಲ್ಲೇ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರಿಂದ ಬರುವ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಮೀಸಲಾತಿ ಪಟ್ಟಿ ಪ್ರಕಟವಾಗಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ ಮೊದಲ ವಾರದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಿ, ಅದಾದ 15 ದಿನಗಳ ನಂತರ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಸರ್ಕಾರ ಯೋಜಿಸಿದೆ.